
ಮಡಿಕೇರಿ ಮೇ.26(Nadubade News): ಈ ಮುಂಗಾರು ಅವಧಿಯಲ್ಲಿ ಬಿರುಸಿನ ಮಳೆಯಾಗುತ್ತಿದ್ದು, ಈ ಸಂಬಂಧ ಯಾವುದೇ ಅವಘಡಗಳಿಗೆ ಆಸ್ಪದವಿರದಂತೆ ಮುನ್ನೆಚ್ಚರಿಕೆ ವಹಿಸಬೇಕಾಗಿರುತ್ತದೆ. ಇತ್ತೀಚಿನ ದಿನಗಳಲ್ಲಿ ಹಲವಾರು ಸಾರ್ವಜನಿಕರು/ಪ್ರವಾಸಿಗರು ಜಿಲ್ಲೆಯ ವಿವಿಧ ಜಲಪ್ರದೇಶಗಳಿಗೆ ಭೇಟಿ ನೀಡುತ್ತಿದ್ದು, ನೀರಿನಲ್ಲಿ ಇಳಿಯುವುದು, ಈಜುವುದು, ಮೋಜು, ಮಸ್ತಿ ಇತ್ಯಾದಿ ಚಟುವಟಿಕೆಗಳನ್ನು ನಡೆಸುತ್ತಿರುವುದರಿಂದ ನೀರಿನಲ್ಲಿ ಮುಳುಗಿ ದುರ್ಮರಣ ಹೊಂದಿರುವಂತಹ ಪ್ರಕರಣಗಳು ಜಿಲ್ಲಾಡಳಿತದ ಗಮನಕ್ಕೆ ಬಂದಿರುತ್ತದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಈ ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಕೊಡಗು ಜಿಲ್ಲೆಯಾದ್ಯಂತ ಇರುವ ಜಲಪಾತಗಳು, ಝರಿ, ನದಿ, ತೊರೆ, ಸಾರ್ವಜನಿಕ ಕೆರೆಗಳು, ಆಣೆಕಟ್ಟು, ಜಲಾಶಯದ ಪ್ರದೇಶಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು ಅನಧಿಕೃತವಾಗಿ ನೀರಿನಲ್ಲಿ ಇಳಿಯುವುದು, ಮುಳುಗು ಹೊಡೆಯುವುದು, ಸಾಹಸ ಚಟುವಟಿಕೆ ನಡೆಸುವುದು, ಈಜುವುದನ್ನು ಮುಂದಿನ ಆದೇಶದವರೆಗೆ ನಿರ್ಬಂಧಿಸಿ ಜಿಲ್ಲಾಧಿಾರಿ ವೆಂಕಟ್ ರಾಜಾ ಆದೇಶಿಸಿದ್ದಾರೆ .
ಈ ಆದೇಶದ ಉಲ್ಲಂಘನೆಯು ವಿಪತ್ತು ನಿರ್ವಹಣಾ ಕಾಯ್ದೆ, 2005 ಸೆಕ್ಷನ್ 51(b) ಮತ್ತು ಸಂಬಂಧಿತ ನಿಯಮ/ಕಾಯ್ದೆಗಳ ವಿವಿಧ ಕಲಂಗಳಡಿಯಲ್ಲಿ ದಂಡನೀಯವಾಗಿದೆ ಎಂದೂ ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.