ಬೆಂಗಳೂರು, ಅ.08 : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ವಾಯುಭಾರ ಕುಸಿತಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡ್ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದ ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ಕರಾವಳಿಯ ದಕ್ಷಿಣ ಕನ್ನಡ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ಮಲೆನಾಡಿನ ಶಿವಮೊಗ್ಗ, ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಿಗೆ ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ, ಎಂದು ಹವಾಮಾನ ಇಲಾಖೆ (IMD) ಹೇಳಿದೆ.
ಅಲ್ಲದೇ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬಳ್ಳಾರಿ, ಕೋಲಾರ, ವಿಜಯನಗರ, ಬಾಗಲಕೋಟೆ, ಬಳ್ಳಾರಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಈಗಾಗಲೇ ಕಾಯಿಯಾಗಿರುವ ಕೊಡಗಿನ ಕಾಫಿ, ಭತ್ತ, ಏಲಕ್ಕಿ ಸೇರಿದಂತೆ ಎಲ್ಲಾ ಬೆಳೆಗಳಿಗೂ ಅಪಾಯವಿದ್ದು, ರೈತರು ತಮ್ಮ ಮುಂದಿನ ಭವಿಷ್ಯವನ್ನು ನೆನೆದು ಆತಂಕ ಪಡುವಂತಾಗಿದೆ.