
ಮಡಿಕೇರಿ ಮೇ.21(Nadubade news): ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಇಂದು ಉದ್ಘಾಟಿಸಿದರು.
ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳುವಂತಾಗಬೇಕು ಎಂದು ಶಾಸಕರು ಸಲಹೆ ಮಾಡಿದರು. ಹಲವು ವರ್ಷಗಳಿಂದ ಆಸ್ಪತ್ರೆ ಆವರಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕಿತ್ತು. ಆದರೆ ಈಗ ಚಾಲನೆ ನೀಡಲಾಗಿದೆ, ನಗರಾಭಿವೃದ್ಧಿ ಮತ್ತು ಪೌರಾಡಳಿತ ಸಚಿವರು ಇಂದಿರಾ ಕ್ಯಾಂಟೀನ್ ಆರಂಭಕ್ಕೆ ಅವಕಾಶ ಮಾಡಿದ್ದಾರೆ. ಆ ನಿಟ್ಟಿನಲ್ಲಿ ಬೇಡಿಕೆಗೆ ತಕ್ಕಂತೆ ಆಸ್ಪತ್ರೆ ಆವರಣದಲ್ಲಿ ಆರಂಭಿಸಲಾಗಿದೆ ಎಂದು ಡಾ.ಮಂತರ್ ಗೌಡ ಅವರು ಹೇಳಿದರು.
ಇಂದಿರಾ ಕ್ಯಾಂಟೀನ್‍ನಲ್ಲಿ ಸ್ವಚ್ಛತೆ ಹಾಗೂ ಪರಿಸರ ಶುಚಿತ್ವಕ್ಕೆ ಹೆಚ್ಚಿನ ಒತ್ತು ನೀಡಬೇಕು. ಸರ್ಕಾರವು ಸಹ ಉಪಾಹಾರ, ಮಧ್ಯಾಹ್ನದ ಊಟ ಹಾಗೂ ರಾತ್ರಿ ಊಟಕ್ಕೆ ಹಣವನ್ನು ಭರಿಸಲಿದ್ದು, ಸಾರ್ವಜನಿಕರಿಗೆ ಒಳಿತಾಗುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಅವರು ಹೇಳಿದರು. ಆಸ್ಪತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸುವುದರಿಂದ ಬೇಡಿಕೆಗೆ ತಕ್ಕಂತೆ ಆಹಾರ ಪೂರೈಸಬೇಕು ಎಂದರು.
ಇದೇ ಸಂದರ್ಭದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಎರಡು ಹೊಸ ವಾಹನಕ್ಕೆ ಚಾಲನೆ ನೀಡಿದರು. ಒಂದು ವಾಹನಕ್ಕೆ 27 ಲಕ್ಷ ರೂ. ನಂತೆ ಒಟ್ಟು 54 ಲಕ್ಷ ರೂ ವೆಚ್ಚದ ಸಿಎಸ್‍ಆರ್ ನಿಧಿಯಿಂದ ತರಿಸಲಾಗಿರುವ ಎರಡು ಹೊಸ ವಾಹನಕ್ಕೆ ಚಾಲನೆ ನೀಡಿದರು.
ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ವಿಧಾನ ಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್, ನಗರಸಭೆ ಸದಸ್ಯರಾದ ಮುಸ್ತಪಾ ಎಂ.ಎ., ಅರುಣ್ ಶೆಟ್ಟಿ, ಮನ್ಸೂರ್ ಅಲಿ, ಬಿ.ಸಿ.ಜಗದೀಶ್, ಜುಲೈಕಾಬಿ, ಮುದ್ದುರಾಜು ಬಿ.ಎನ್., ಪೌರಾಯುಕ್ತರಾದ ಎಚ್.ಆರ್.ರಮೇಶ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಬಿ.ಸತೀಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಸ್ಥಾನಿಕ ವೈದ್ಯಾಧಿಕಾರಿ ಡಾ.ಸತೀಶ್, ವೈದ್ಯಾಧಿಕಾರಿಗಳಾದ ಡಾ.ಪುರುಷೋತ್ತಮ, ಡಾ.ಶ್ವೇತಾ ಇತರರು ಇದ್ದರು.